ಗ್ರೇಟರ್ ಬೆಂಗಳೂರು ಭಾಗದಲ್ಲಿ ಚುರುಕುಗೊಂಡ SIR ಕಾರ್ಯ: ಮತ್ತೆ 1,117 ಅಧಿಕಾರಿಗಳ ನಿಯೋಜನೆ..!
ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಆಯ್ದು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳು ಹಾಗೂ ರಾಜಕೀಯ ಪಕ್ಷಗಳಿಂದ ಪೊಲೀಸ್ ದೂರುಗಳು ಕೇಳಿಬರ...

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉದ್ದೇಶಪೂರ್ವಕವಾಗಿ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ಆರೋಪಿಸಿ ವಿವಿಧ ರಾಜಕೀಯ ಪಕ್ಷಗಳು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿವೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಎಸ್‌ಐಆರ್ ಕಾರ್ಯವನ್ನು ಚುರುಕುಗೊಳಿಸಲು ಹೆಚ್ಚುವರಿಯಾಗಿ 1,117 ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಮತದಾರರ ಪಟ್ಟಿಯ ಎಸ್‌ಐಆರ್‌ಗೆ ಸಂಬಂಧಿಸಿದ ಆಕ್ಷೇಪಣೆಗಳು ಹಾಗೂ ಹಕ್ಕುಗಳ ಕುರಿತಂತೆ ವಿಶೇಷ ಆಯುಕ್ತೆ (ಚುನಾವಣೆ) ಶಿಲ್ಪಾ ನಾಗ್ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಜಿಬಿಎ ವ್ಯಾಪ್ತಿಯಲ್ಲಿ 814 ವಿಚಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1,117 ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳ ನೇಮಕದಿಂದಾಗಿ, ಪ್ರಸ್ತುತ ಕಾರ್ಯನಿರತ ಅಧಿಕಾರಿಗಳ ಒಟ್ಟು ಸಂಖ್ಯೆ 1,193ಕ್ಕೆ ತಲುಪಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ವಿಚಾರಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ರೂಪಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಮ್ಯಾಪ್ ಮಾಡಲಾಗಿಲ್ಲ’ ಅಥವಾ ‘ತಾರ್ಕಿಕ ವ್ಯತ್ಯಾಸ’ ಎಂದು ನಮೂದಿಸಿ ನೋಟಿಸ್ ನೀಡಿದ್ದಲ್ಲಿ, ಅಥವಾ ನಮೂನೆ-6 ಮತ್ತು ನಮೂನೆ-7ರ ದಾಖಲೆಗಳ ಪರಿಶೀಲನೆ ಅಗತ್ಯವಿದ್ದಲ್ಲಿ, ಮತದಾರರ ನೋಂದಣಿ ಅಧಿಕಾರಿಗಳು ಅಥವಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಮನೆಗೆ ತೆರಳಿ ದಾಖಲೆಗಳನ್ನು ಪಡೆದು, ಪರಿಶೀಲನೆ ನಡೆಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಿದ್ದಾರೆ.
ಆದ್ದರಿಂದ ಅಂತಹ ಮತದಾರರು ವಿಚಾರಣೆಗೆ ಖುದ್ದಾಗಿ ಬರಬೇಕಿಲ್ಲ. ವಿಶೇಷ ಸಂದರ್ಭಗಳಲ್ಲಿ ಮತದಾರರ ನೋಂದಣಿ ಅಧಿಕಾರಿಗಳ ತೀರ್ಮಾನದಂತೆ ವಿಚಾರಣೆಯನ್ನು ಆನ್‌ಲೈನ್ ಮೂಲಕವೂ ನಡೆಸಬಹುದು ಎಂದು ಅವರು ವಿವರಿಸಿದರು.
ಎಸ್‌ಐಆರ್ ದತ್ತಾಂಶದ ಪ್ರಕಾರ ಜಿಬಿಎ ವ್ಯಾಪ್ತಿಯಲ್ಲಿ 56 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಇವರ ಪೈಕಿ 24 ಲಕ್ಷಕ್ಕೂ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ. ಎಲ್ಲ ನೋಟಿಸ್‌ಗಳನ್ನು ಈಗಾಗಲೇ ವಿತರಿಸಲಾಗಿದ್ದು, ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಪ್ರಸ್ತುತ 3,70,329 ನೋಟಿಸ್‌ಗಳ ವಿಚಾರಣೆ ಬಾಕಿ ಇದೆ. ನಿಗದಿತ ಅವಧಿಯೊಳಗೆ ವಿಚಾರಣೆಯನ್ನು ಮುಗಿಸಲು ಸೂಕ್ಷ್ಮ ಯೋಜನೆ ರೂಪಿಸಲಾಗಿದೆ.
ಇಲ್ಲಿಯವರೆಗೆ ನಮೂನೆ-6, 7 ಮತ್ತು 8ಕ್ಕೆ ಸಂಬಂಧಿಸಿದ ಒಟ್ಟು 5,42,893 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 1,02,712 ಅರ್ಜಿಗಳನ್ನು ಅಂಗೀಕರಿಸಲಾಗಿದ್ದು, 3,89,698 ಅರ್ಜಿಗಳು ಬಾಕಿ ಇವೆ. ಬಾಕಿ ಇರುವ ಅರ್ಜಿಗಳನ್ನು ಚುನಾವಣಾ ಆಯೋಗದ ನಿಯಮಾವಳಿಗಳ ಅನ್ವಯ ಪರಿಶೀಲಿಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
18 ವರ್ಷ ತುಂಬಿರುವ ಹಾಗೂ ಮೊದಲ ಬಾರಿಗೆ ಮತದಾರರಾಗಿ ನೋಂದಾಯಿಸಿಕೊಳ್ಳಲು ಅರ್ಹರಾಗಿರುವವರಿಗೆ ನಮೂನೆ-6 ನೀಡಬೇಕು ಎಂದು ಚುನಾವಣಾ ಆಯೋಗ ನಿರ್ದೇಶಿಸಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದ ಅರ್ಹ ವ್ಯಕ್ತಿಗಳಿಗೂ ಇದೇ ನಮೂನೆಯ ಮೂಲಕ ನೋಂದಣಿಗೆ ಅವಕಾಶ ನೀಡಬೇಕು ಎಂದು ಸೂಚಿಸಲಾಗಿದೆ.
ಎಸ್‌ಐಆರ್ ಪ್ರಕ್ರಿಯೆ ಮುಕ್ತಾಯವಾದ ನಂತರ ಅರ್ಹರೆಲ್ಲರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಅಭಿಯಾನಗಳು ಮತ್ತು ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಶಿಲ್ಪಾ ನಾಗ್ ತಿಳಿಸಿದರು.
ದಿನಾಂಕಗಳು
ಆಗಸ್ಟ್ 24, 2026: ಕರಡು ಮತದಾರರ ಪಟ್ಟಿ ಪ್ರಕಟಣೆ
ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ: ಹಕ್ಕುಗಳು ಮತ್ತು ಆಕ್ಷೇಪಣೆ ಸಲ್ಲಿಕೆ ಅವಧಿ
ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ: ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ
ಅಕ್ಟೋಬರ್ 27, 2026: ಅಂತಿಮ ಮತದಾರರ ಪಟ್ಟಿ ಪ್ರಕಟಣೆ




